ಮತ್ತೊಬ್ಬ ಕನ್ನಡದ ನಟ ಹೃದಯಾಘಾತದಿಂದ ನಿಧನ

ಮಣಿಕಂಠ ಜನತಾ ರಾಯಭಾರಿ
1 Min Read

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಜನಪ್ರಿಯ ನಟ ದಿಲೀಪ್ ರಾಜ್ (47) ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೊಳಗಾದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಮಧ್ಯಾಹ್ನದ ಸಮಯದಲ್ಲಿ ದಿಲೀಪ್ ರಾಜ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಿರುತೆರೆಯ ‘ಜೋಡಿ ಹಕ್ಕಿ’ ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ಅವರು, ಸಿನಿಮಾಗಳಲ್ಲೂ ಸಕ್ರಿಯರಾಗಿದ್ದರು. ‘ಮಿಲನ’, ‘ಲವ್ ಗುರು’, ‘ಗಾಳಿಪಟ’ ಸೇರಿದಂತೆ ಹಲವು ಪ್ರಮುಖ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದರು.

ಕೇವಲ ನಟನೆಯಷ್ಟೇ ಅಲ್ಲದೆ, ಅವರು ತಮ್ಮದೇ ಆದ ನಿರ್ಮಾಣ ಸಂಸ್ಥೆಯ ಮೂಲಕ ಕಿರುತೆರೆಗೆ ಹಲವು ಯಶಸ್ವಿ ಧಾರಾವಾಹಿಗಳನ್ನು ನೀಡಿದ್ದರು. ದಿಲೀಪ್ ರಾಜ್ ಅವರ ಅಕಾಲಿಕ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಮತ್ತು ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲೇ ಸೃಜನಶೀಲ ನಟನನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ಸಂತಾಪ ಸೂಚಿಸಲಾಗಿದೆ.

ಮೃತರು ಪತ್ನಿ ಶ್ರೀವಿದ್ಯಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಅಭಿಮಾನಿಗಳು ‘ಸರಳ ವ್ಯಕ್ತಿತ್ವದ ನಟ ಇನ್ನಿಲ್ಲ’ ಎಂದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

Share this Article
Leave a comment