ಚಾಮರಾಜನಗರ: ರಾಜ್ಯದ ಉಪ್ಪಾರ ಸಮುದಾಯದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಕಾಂಗ್ರೆಸ್ ಓಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಒತ್ತಾಯಿಸಿದರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಗೆಲುವು ಸಾಧಿಸಿರುವ ಪುಟ್ಟರಂಗಶೆಟ್ಟಿ ಅವರು ತಮ್ಮ ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಅಪಾರವಾದ ಹೆಸರು ಗಳಿಸಿದ್ದಾರೆ. ಕೇವಲ ಉಪ್ಪಾರ ಸಮುದಾಯಕ್ಕೆ ಸೀಮಿತವಾಗದೇ ಸರ್ವಜನಾಂಗದ ಅಭಿವೃದ್ಧಿಗೆ ಪುಟ್ಟರಂಗಶೆಟ್ಟಿ ಅವರು ಶ್ರಮಿಸಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ರಾಜ್ಯದಲ್ಲಿ 40 ಲಕ್ಷಕ್ಕಿಂತಲೂ ಹೆಚ್ಚು ಉಪ್ಪಾರ ಸಮುದಾಯದವರು ಇದ್ದು, ಸುಮಾರು 33 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ್ಪಾರ ಸಮುದಾಯ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಿಂದೆ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಇರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಕೆರೆಹಳ್ಳಿ ರೇವಣ್ಣ, ಮಹಾದೇವಶೆಟ್ಟಿ, ಶ್ರೀನಿವಾಸ್, ಆಲನಹಳ್ಳಿ ಕಾವ್ಯ ಹಾಜರಿದ್ದರು.