ಚಾಮರಾಜನಗರ: ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ಇತ್ತೀಚೆಗೆ ಸಂಭವಿಸಿದ ರೂಪಾ ಎಂಬ ಮಹಿಳೆಯ ಅಸಹಜ ಸಾವನ್ನು ಖಂಡಿಸಿ ಮೇ 12 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸಿಮ್ಸ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಮುಂಭಾಗ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅಸಹಜವಾಗಿ ಸಾವನ್ನಪ್ಪಿದ ರೂಪಾ ಅವರ ಕುಟುಂಬದವರು, ಅರಳೀಪುರ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಘಟನೆಯ ವಿವರ: ತಾಲೂಕಿನ ಅರಳೀಪುರ ಗ್ರಾಮದ ಲೀಲಾವತಿ ಅವರ ಮಗಳಾದ ರೂಪಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೇ 3 ರಂದು ಸಿಮ್ಸ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗಕ್ಕೆ ದಾಖಲಾಗಿದ್ದರು. ಮೇ 6 ರಂದು ರೂಪಾ ಅವರಿಗೆ ಹೆರಿಗೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಹೆರಿಗೆ ಕೊಠಡಿಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಕೆಲವು ಸಮಯದ ಬಳಿಕ ಡಾ.ಭಾರತಿ ಮತ್ತು ಡಾ.ಕೌಶಲ್ಯ ಹಾಗೂ ಇನ್ನೂ ಮುಂತಾದವರು ರೂಪಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ರೂಪಾ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದರು. ಸಿಮ್ಸ್ ವೈದ್ಯರ ನಿರ್ಲಕ್ಷ್ಯವೇ ಗರ್ಭಿಣಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ವೈದ್ಯರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮೇ 12 ರಂದು ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ಮುಂದಾಗಿದ್ದಾರೆ.