ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಅವರ ಮೂಲಕ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಈ ಸಾಲಿನ ವೈದ್ಯಕೀಯ ವಿದ್ಯಾಭ್ಯಾಸದ ಪ್ರವೇಶಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಾಶವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಬಹಳಷ್ಟು ಅರ್ಹ ವಿದ್ಯಾರ್ಥಿಗಳು ಆತ್ಮಹತ್ಯೆಯನ್ನು ಸಹ ಮಾಡಿಕೊಂಡಿರುತ್ತಾರೆ. ಇದು ಅತ್ಯಂತ ಖಂಡನೀಯ ಎಂದರು.

ಕೇಂದ್ರ ಸರ್ಕಾರ ಇದರ ಬಗ್ಗೆ ತೀವ್ರವಾಗಿ ನಿಗಾವಹಿಸಿ ತಪ್ಪಿತಸ್ಥರ ವಿರುದ್ಧ  ಕಠಿಣ ಕ್ರಮವಹಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳು ನಡೆಯದ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕು. ಇಂತಹ ಒಂದು ಅನಾಹುತ ನಡೆದಿರುವ ಹಿನ್ನಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರು ಇದರ ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಈ ವೈದ್ಯಕೀಯ ವಿದ್ಯಾಭ್ಯಾಸದ ಪರೀಕ್ಷೆಗಳನ್ನು  ಇನ್ನು ಮುಂದೆ ಆಯಾಯ ರಾಜ್ಯ ಸರ್ಕಾರಗಳಿಗೆ ನಡೆಸುವಂತೆ ಆದೇಶ ನೀಡಬೇಕು. ಈ ಹಿಂದೆ ಈ ನೀಟ್ ಪರೀಕ್ಷೆಗಳನ್ನು ಆಯಾ ರಾಜ್ಯ ಸರ್ಕಾರಗಳೇ ನಡೆಸುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಈ ನೀಟ್ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ತೆಗೆದುಕೊಂಡಿದೆ. ಪ್ರಸ್ತುತ ನೀಟ್ ಪರೀಕ್ಷೆಗಳು ಅವ್ಯವಸ್ಥೆಯಿಂದ ಕೂಡಿದ್ದು, ವಿದ್ಯಾರ್ಥಿಗಳಿಗೆ ಇದು ಒಂದು ರೀತಿಯ ಮರಣ ಶಾಸನವಾಗಿದೆ. ಆದ್ದರಿಂದ ಈ ತಕ್ಷಣ  ತಾವು ಮುಂದಿನ ವರ್ಷದಿಂದ ಈ ನೀಟ್ ಪರೀಕ್ಷೆಗಳನ್ನು ಆಯಾಯ ರಾಜ್ಯ ಸರ್ಕಾರಗಳೇ ನಡೆಸುವಂತೆ ಅನುಮತಿ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಣ್ಯದಹುಂಡಿ ರಾಜು, ಹೊಮ್ಮ ಲೋಕೇಶ್,ಅರುಣ್ ಕುಮಾರ್ ಗೌಡ, ರವಿಚಂದ್ರಪ್ರಸಾದ್ ಕಹಲೆ, ರಾಜಪ್ಪ, ಶಿವು, ಇತರರು ಹಾಜರಿದ್ದರು.

 

Share this Article
Leave a comment