ರಾಯಚೂರು: ಪಾಮನಕಲ್ಲೂರು ಕ್ರಾಸ್ ಸಮೀಪದ ಸುಡುಗಾಡು ಸಿದ್ಧರು ವಾಸಿಸುವ ಬಸವ ಜ್ಯೋತಿ ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮಳೆ ನೀರು ಹಾಗೂ ಚರಂಡಿ ನೀರು ಜೋಪುಡಿಗಳಿಗೆ ನುಗ್ಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾರೀ ಮಳೆಯಿಂದ ಜೋಪುಡಿಗಳೊಳಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರಿಯಿಡೀ ನಿದ್ದೆಯಿಲ್ಲದೆ ಜೋಪುಡಿಗಳನ್ನು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಈ ಪ್ರದೇಶದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಪ್ರತೀ ವರ್ಷ ಇದೇ ಸಮಸ್ಯೆ ಎದುರಾಗುತ್ತಿದೆ. ಮಳೆ ನೀರು ಸರಿಯಾಗಿ ಹರಿದು ಹೋಗದೇ ಜೋಪುಡಿಗಳೊಳಗೆ ನುಗ್ಗುತ್ತಿರುವುದು ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ತಕ್ಷಣ ಪಟ್ಟಣ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ, ಬಸವ ಜ್ಯೋತಿ ನಗರದಲ್ಲಿ ಶಾಶ್ವತ ಚರಂಡಿ ವ್ಯವಸ್ಥೆ ನಿರ್ಮಿಸಿ ಮಳೆ ನೀರು ಹಾಗೂ ಚರಂಡಿ ನೀರು ಸುಗಮವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
ವರದಿ-ಶಿವರಾಜ್ ಮೋತಿ