ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ನಿಯಂತ್ರಣ ಮಾಡುವಂತೆ ಆಗ್ರಹಿಸಿ ನಗರಸಭೆ ಮಾಜಿ ಸದಸ್ಯ ಮಹದೇವಯ್ಯ ಅವರು ಗುರುವಾರ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಚಾಮರಾಜನಗರ ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಲ್ಲಿಯೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಹಾಗೂ ವಯೋವೃದ್ಧರು ತೊಂದರೆ ಅನುಭವಿಸುವಂತಾಗಿದೆ ಎಂದರು.

ನಗರಸಭೆ ವ್ಯಾಪ್ತಿಯ ಕೆಲವು ವಾರ್ಡ್ ಗಳಲ್ಲಿ ಬೀದಿನಾಯಿಗಳು ಸಾರ್ವಜನಿಕರ ಮೇಲೆ ದಾಳಿ ನಡೆಸುತ್ತಿದ್ದು, ಪ್ರತಿಯೊಬ್ಬರು ಭಯಭೀತರಾಗಿದ್ದಾರೆ. ನಮ್ಮ ಸೋಮವಾರಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿಯಿಂದ ದನ-ಕರುಗಳನ್ನು ಮೇಯಿಸಲು ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕ್ರಮವಹಿಸಿ ಬೀದಿನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.