ಚಾಮರಾಜನಗರ: ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಲ್ಲೂರು ಸೋಮೇಶ್ವರ್ ಒತ್ತಾಯಿಸಿದರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿರುವ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು, ಬೆಂಕಿ ಮಹಾದೇವಪ್ಪ, ವಿ.ಸೋಮಣ್ಣ, ಮಲ್ಲಿಕಾರ್ಜುನಪ್ಪ ಅಂತಹ ಘಟಾನುಘಟಿ ನಾಯಕರನ್ನು ಸೋಲಿಸಿ ಶಾಸಕರಾಗಿದ್ದರು. ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದು, ಅನುಭವಿ ಹಾಗೂ ಜನಪರ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸ್ಥಳೀಯ ಜನರಿಗೆ ಹಾಗೂ ಅಧಿಕಾರಿಗಳಿಗೆ ಕೈಗೆಟುಕುವ ಶಾಸಕರಾಗಿದ್ದು, ಸಚಿವರಾದರೂ ಸಾರ್ವಜನಿಕರಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದ ವರೆಗೂ ಅನುಭವ ಹೊಂದಿದ್ದಾರೆ. ಸಹಕಾರ ಕ್ಷೇತ್ರದಲ್ಲೂ ಅಪಾರ ಅನುಭವವನ್ನು ಹೊಂದಿದ್ದಾರೆ. ಅವರಿಗೆ ಸಚಿವ ಸ್ಥಾನವನ್ನು ನೀಡಿದರೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬಲ ತುಂಬಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಪುಟ್ಟರಂಗಶೆಟ್ಟಿ ಅವರಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಮರಿಯಾಲದಹುಂಡಿ ಕುಮಾರ್, ಮಲ್ಲಿಕಾರ್ಜುನ ಲಿಂಗನಪುರ, ಹೆಗ್ಗೋಠಾರ ರಮೇಶ್, ರಾಜು ಅಮಚವಾಡಿ, ರಾಜೇಶ್ ಮೂಡಹಳ್ಳಿ, ಕುಮಾರ್ ಮಾದಾಪುರ, ಮಂಜುಳಾ ಹಾಜರಿದ್ದರು.