ಚಾಮರಾಜನಗರ: ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಡಾ.ಸಿ.ಎನ್.ರೇಣುಕಾದೇವಿ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಾಮರಾಜನಗರ ಜಿಲ್ಲಾ ಶಾಖೆ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ 2025-26 ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಥವಾ htt-ps://powermedia.info ಲಿಂಕ್ ಮೂಲಕ ಮೇ 25 ರೊಳಗೆ ಅರ್ಜಿಯನ್ನು ಸಲ್ಲಿಸುವುದು ಎಂದು ತಿಳಿಸಿದ್ದಾರೆ.

ಸರ್ಕಾರಿ ನೌಕರರ ಮಕ್ಕಳು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ-ತಾಯಿ ಯಾವುದಾದರೊಂದು ಇಲಾಖೆಯಲ್ಲಿ ಸರ್ಕಾರಿ ನೌಕರರಾಗಿರಬೇಕು. .ನೌಕರರ ಸಂಘದ ಸದಸ್ಯತ್ವ ಹೊಂದಿರಬೇಕು. ಸಂಘದಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ, ತಾಲೂಕು ಅಥವಾ ಯೋಜನಾ ಶಾಖೆ ಅಧ್ಯಕ್ಷರಿಂದ ಸೇವಾ ದೃಢೀಕರಣ ಪತ್ರವನ್ನು ಸಲ್ಲಿಸಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಎ ಹೆಚ್ಚಳಕ್ಕೆ ಅಭಿನಂದನೆ: ರಾಜ್ಯ ಸರ್ಕಾರಿ ನೌಕರರಿಗೆ 01.01.2026 ರಿಂದ ಅನ್ವಯವಾಗುವಂತೆ ಶೇ.15 ತುಟ್ಟಿ ಭತ್ಯೆ ಹೆಚ್ಚಳಮಾಡಿ ಅಧಿಕೃತ ಆದೇಶ ಹೊರಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮತ್ತು ಈ ಆದೇಶಕ್ಕೆ ಶ್ರಮಿಸಿದ ರಾಜ್ಯಾಧ್ಯಕ್ಷ ಸಿ.ಎಸ್.ಷಢಾಕ್ಷರಿ ಅವರಿಗೆ ಜಿಲ್ಲೆಯ ಸಮಸ್ತ ನೌಕರರ ಪರವಾಗಿ ಜಿಲ್ಲಾಧ್ಯಕ್ಷರಾದ ಡಾ.ಸಿ.ಎನ್.ರೇಣುಕಾದೇವಿ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.