ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಕಿಡಿಗೇಡಿಗಳ ವಿರುದ್ಧ ಆಕ್ರೋಶ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ತಾಲೂಕಿನ ಮಸಣಾಪುರದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿದ ಘಟನೆ ಮಾಸುವ ಮುನ್ನವೇ ಹೊಂಗನೂರು ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿದ್ದಾರೆ.

ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಎರಚಿ ಅಪಮಾನ ಮಾಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೇ ಮಸಣಾಪುರದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಪ್ರಕರಣದ ಚರ್ಚೆ ಇನ್ನೂ ಮಾಸುವ ಮುನ್ನವೇ ಹೊಂಗನೂರಿನಲ್ಲಿ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಸ್ಥಳೀಯರು ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share this Article
Leave a comment