ಚಾಮರಾಜನಗರ: ರಾಜ್ಯದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲೂ ಪ್ರಕೃತಿ ವಿಕೋಪ ಮೇಲುಸ್ತುವಾರಿಗಳನ್ನು ನೇಮಕ ಮಾಡಲಾಗಿದ್ದು, ಮೈಸೂರು ಮತ್ತು ಚಾಮರಾಜನಗರ ಉಸ್ತುವಾರಿಯನ್ನಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.
ಪ್ರಾಕೃತಿಕ ವಿಕೋಪಗಳ ನಿರ್ವಹಣೆಗಾಗಿ ಜಿಲ್ಲಾವಾರು ಜವಾಬ್ದಾರಿಗಳ ಹಂಚಿಕೆ ಮಾಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಜಿಲ್ಲೆಗಳ ಜವಾಬ್ದಾರಿಯನ್ನು ಸಚಿವರುಗಳಿಗೆ ಹಂಚಿಕೆ ಮಾಡಲಾಗಿದೆ.
ಅದರಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ, ಕೆ.ಹೆಚ್.ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ, ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ, ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ, ಕೆ.ಜೆ. ಜಾರ್ಜ್ ಅವರಿಗೆ ಚಿಕ್ಕಮಗಳೂರು ಮತ್ತು ದಾವಣಗೆರೆ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಜವಾಬ್ದಾರಿಯನ್ನು ವಹಿಸಲಾಗಿದೆ.
ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್, ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮತ್ತು ಯಾದಗಿರಿ, ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ, ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ, ಯು ಟಿ ಖಾದರ್ ಅವರಿಗೆ ದಕ್ಷಿಣಕನ್ನಡ, ಮತ್ತು ಉಡುಪಿ ಹಾಗೂ ಬೈರತಿ ಸುರೇಶ್ ಅವರಿಗೆ ಕೋಲಾರ ಜಿಲ್ಲೆಯ ಪ್ರಕೃತಿ ವಿಕೋಪ ಮೇಲುಸ್ತುವಾರಿ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.