ಗುಂಡ್ಲುಪೇಟೆ: ಮೈಸೂರು–ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ-766ರ ಕಾಮಗಾರಿ ವಿಳಂಬದಿಂದ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದೆ ಎಂದು ಆರೋಪಿಸಿ ಜಾರಕಿಹೊಳಿ ಬ್ರಿಗೇಡ್ ವತಿಯಿಂದ ತಾಲೂಕಿನ ಗರಗನಹಳ್ಳಿ ಗೇಟ್ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಜಾರಕಿಹೊಳಿ ಬ್ರಿಗೇಡ್ ಸಂಸ್ಥಾಪಕ ಗೋವಿಂದನಾಯಕ ಮಾತನಾಡಿ, ಕಳೆದ ಒಂದು ವರ್ಷದಿಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದರೂ, ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಒಂದೇ ಬದಿಯಲ್ಲಿ ವಾಹನ ಸಂಚಾರ ನಡೆಸಲಾಗುತ್ತಿರುವುದರಿಂದ ಅಪಘಾತಗಳು ಹೆಚ್ಚಾಗಿವೆ ಎಂದು ಆರೋಪಿಸಿದರು.
ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ರಸ್ತೆ ಕಾಮಗಾರಿಯಿಂದ ಉಂಟಾಗುತ್ತಿರುವ ಧೂಳಿನಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಲ್ಲದೆ, ಸುತ್ತಮುತ್ತಲಿನ ಕೃಷಿ ಭೂಮಿಗಳಲ್ಲಿನ ಬೆಳೆಗಳಿಗೂ ಹಾನಿಯಾಗುತ್ತಿದೆ ಎಂದು ದೂರಿದರು.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿರುವ ಸಂಘಟನೆ, ಮೈಸೂರು ಮತ್ತು ಗುಂಡ್ಲುಪೇಟೆ (ಕಣ್ಣೆಗಾಲ) ಟೋಲ್ ಪ್ಲಾಜಾಗಳಲ್ಲಿ ಟೋಲ್ ಶುಲ್ಕ ಸಂಗ್ರಹಿಸುತ್ತಿದ್ದರೂ ಸಾರ್ವಜನಿಕರಿಗೆ ಗುಣಮಟ್ಟದ ರಸ್ತೆ ಒದಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆದ್ದರಿಂದ ಕಾಮಗಾರಿ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಶುಲ್ಕ ವಸೂಲಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಇಲ್ಲದಿದ್ದರೇ ಟೋಲ್ ಗೇಟ್ ಬಳಿಯಲ್ಲೇ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರಾಜೇಂದ್ರ ವಿ ನಾಯಕ್, ಮೋನಿಷ್, ಧನುಷ್ ಗೌಡ, ರವಿ ಬಾಂಡ್, ಕೆಂಪ (ಹರ್ಷ), ಅರುಣ್ ನಾಯಕ್, ಮನೋಜ್ ಪಿ ನಾಯಕ್, ಸುಕೃತ್, ಯಶ್ವಂತ್, ವಿನು ಸೇರಿದಂತೆ ಹಲವರು ಭಾಗವಹಿಸಿದ್ದರು.