ಚಾಮರಾಜನಗರ: ಇತ್ತೀಚೆಗೆ ಜಿಲ್ಲಾ ನ್ಯಾಯಾಲಯಕ್ಕೆ ಕಿಡಿಗೇಡಿಗಳು ಹುಸಿ ಬಾಂಬ್ ಇ-ಮೇಲ್ ಸಂದೇಶವನ್ನು ಕಳುಹಿಸುತ್ತಿದ್ದರು. ಆದರೀಗ ಜಿಲ್ಲಾ ಪ್ರಧಾನ ನ್ಯಾಯಾಧೀಶರಿಗೆ ಬೆದರಿಕೆ ಕರೆ ಮಾಡಿದ್ದು, ಈ ಸಂಬಂಧ ಅನಾಮಧೇಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಅನಾಮಧೇಯ ವ್ಯಕ್ತಿಯೊಬ್ಬ ಜಿಲ್ಲಾ ನ್ಯಾಯಾಧೀಶರಿಗೆ ಬುಧವಾರ ಕರೆ ಮಾಡಿದ್ದು, CR.NO 144/2026 ಪ್ರಕರಣದಲ್ಲಿ ಆರೋಪಿತರಿಗೆ ಜಾಮೀನು ಮಂಜೂರು ಮಾಡಬೇಕೆಂದು ಒತ್ತಾಯಿಸಿದ್ದಾನೆ. ಒಂದು ವೇಳೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಲ್ಲಿ ಮುಂದಿನ ಟಾರ್ಗೆಟ್ ನೀನೆ, ನಿನ್ನನ್ನು ಬದುಕಲು ಬಿಡುವುದಿಲ್ಲ ಎಂದು ಹಾಗೂ ಅವಾಚ್ಯ ಶಬ್ದಗಳಿಂದ ನಿಂಧಿಸುವುದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ.
ಈ ಸಂಬಂಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ. ರವರು ಮೌಖಿಕವಾಗಿ ಠಾಣೆಗೆ ತಿಳಿಸಿರುತ್ತಾರೆ. ಅದಲ್ಲದೇ ಅನಾಮಧೇಯ INTERNET CALL ಸಂಖ್ಯೆ 41000697200 ತಾಂತ್ರಿಕವಾಗಿ ಪತ್ತೆ ಹಚ್ಚಿ ಜೀವ ಬೆದರಿಕೆ ಒಡ್ಡಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಬದ್ಧವಾಗಿ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ಕಾನೂನು ರೀತ್ಯಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಲ್ಲದೇ ಜಿಲ್ಲಾ ಪ್ರಧಾನ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರ ಜೀವ ಹಾಗೂ ಕರ್ತವ್ಯ ನಿರ್ವಹಣೆಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಅಗತ್ಯ ಪೊಲೀಸ್ ರಕ್ಷಣೆ ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸರು ಒದಗಿಸಿದ್ದಾರೆ.
ನಿರಂತರವಾಗಿ ಬಂದಿತ್ತು ಹುಸಿ ಬಾಂಬ್ ಸಂದೇಶ: ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚೆಗೆ ವಾರದಲ್ಲಿ ಸತತವಾಗಿ ನಾಲ್ಕು ಬಾರಿ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಕಿಡಿಗೇಡಿಗಳು ಇ-ಮೇಲ್ ಮೂಲಕ ಸಂದೇಶ ಕಳುಹಿಸಿ ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕುತ್ತಿದ್ದರು. ಪೊಲೀಸರು ತೀವ್ರ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಎಂಬುದನ್ನು ಖಚಿತಪಡಿಸಿದ್ದರು. ಅದಲ್ಲದೇ ಜಿಲ್ಲಾ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ನ್ಯಾಯಾಲಯಕ್ಕೆ ಪ್ರವೇಶ ಮಾಡುವ ಪ್ರತಿಯೊಬ್ಬರನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತಿದ್ದರು. ಆದರೆ ಈಗ ಜಿಲ್ಲಾ ನ್ಯಾಯಾಧೀಶರಿಗೆ ಬೆದರಿಕೆ ಕರೆ ಮಾಡಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಜಿಲ್ಲಾ ನ್ಯಾಯಾಲಯಕ್ಕೆ ಮತ್ತಷ್ಟು ಬಿಗಿಭದ್ರತೆ ಹೆಚ್ಚಿಸಬೇಕಾಗಿದೆ.
ಸರ್ಕಾರ ಮತ್ತು ಪೊಲೀಸ್ ಇಲಾಖೆ ವೈಫಲ್ಯ: ನ್ಯಾಯಾಧೀಶರ ಮೇಲೆಯೇ ಇಂತಹ ಬೆದರಿಕೆ ಕರೆ ಬರುತ್ತಿರುವುದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವಾಗಿದೆ ಎಂದು ಯುವ ವಕೀಲ ಮಹೇಂದ್ರ ಕಾಡಹಳ್ಳಿ ಖಂಡಿಸಿದರು. ಜಿಲ್ಲಾ ನ್ಯಾಯಾಲಯ ಮತ್ತು ನ್ಯಾಯಾಧೀಶರಿಗೆ ಇಂತಹ ಬೆದರಿಕೆ ಬರುತ್ತಿರುವುದು ಪ್ರಜಾಪ್ರಭುತ್ವ ಮತ್ತು ಕಾನೂನು ವ್ಯವಸ್ಥೆಯ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತಾಗುತ್ತದೆ. ಈಗಲೇ ಜನರು ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದು, ಇಂತಹ ಪ್ರಕರಣಗಳು ಜರುಗಿದಾಗ ಜನರು ಸಂಪೂರ್ಣ ನಂಬಿಕೆ ಕಳೆದುಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.