ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮರ್ಪಕ ಸೇವೆ ಒದಗಿಸಿ; ಸಂಸದ ಸುನೀಲ್ ಬೋಸ್ ತಾಕೀತು

ಮಣಿಕಂಠ ಜನತಾ ರಾಯಭಾರಿ
3 Min Read

ಚಾಮರಾಜನಗರ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್), ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರು ತಾಕೀತು ಮಾಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಬಡವರಾಗಿದ್ದು, ವೈದ್ಯಕೀಯ ಚಿಕಿತ್ಸಾ ಸೇವೆ ಸಕಾಲಕ್ಕೆ ದೊರೆಯದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ವೈದ್ಯರು ಆಸ್ಪತ್ರೆಗಳಲ್ಲಿ ಲಭ್ಯರಿದ್ದು, ರೋಗಿಗಳಿಗೆ ಸ್ಪಂದಿಸಬೇಕು. ನಿಗದಿತ ಅವಧಿಯಲ್ಲಿ ವೈದ್ಯರು ಕಡ್ಡಾಯವಾಗಿ ಆಸ್ಪತ್ರೆಯಲ್ಲಿಯೇ ಇರಬೇಕು. ರೋಗಿಗಳಿಗೆ ವೈದ್ಯರು ಸಿಗದೆ ಇರುವ ದೂರುಗಳು ಮತ್ತೆ ಕೇಳಿ ಬಂದಲ್ಲಿ ಸಹಿಸುವುದಿಲ್ಲ ಎಂದು ಸಂಸದರು ಎಚ್ಚರಿಕೆ ನೀಡಿದರು.

ವೈದ್ಯಕೀಯ ಕಾಲೇಜಿನ ಡೀನ್ ಅವರು ಪ್ರತಿನಿತ್ಯ ವೈದ್ಯರ ಹಾಜರಾತಿಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಕರ್ತವ್ಯದ ಪೂರ್ಣ ಅವಧಿಯಲ್ಲಿ ವೈದ್ಯರು ಇದ್ದು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೈದ್ಯರ ಗೈರು ಹಾಜರಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಇನ್ನು ಮುಂದೆ ಕಟ್ಟುನಿಟ್ಟಾಗಿ ವೈದ್ಯರ ಸೇವೆ ದೊರೆಯಬೇಕು ಎಂದು ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ತೊಂದರೆಯಾಗದಂತೆ ರಸ್ತೆಯ ಎರಡೂ ಬದಿಯಲ್ಲಿ ಹಾಗೂ ಡಿವೈಡರ್‍ಗಳಲ್ಲಿ ರಿಫ್ಲೆಕ್ಟರ್ ಹಾಕಬೇಕು. ರಸ್ತೆಗಳು ಕೂಡುವ ಜಂಕ್ಷನ್ ಸ್ಥಳಗಳಲ್ಲಿ ವೃತ್ತ ನಿರ್ಮಿಸಬೇಕು. ಸೈನ್ ಬೋರ್ಡ್ ಗಳನ್ನು ಅಳವಡಿಸಬೇಕು. ರಸ್ತೆಗಳ ಕಟಿಂಗ್ ಕ್ರಾಸ್‍ಗಳಲ್ಲಿ ಮಿರರ್ ಹಾಕಬೇಕು. ಟೋಲ್ ಕಲೆಕ್ಷನ್ ಬಗ್ಗೆ ಸ್ಥಳೀಯರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಆಧಾರ್ ಕಾರ್ಡ್ ಆಧಾರದಲ್ಲಿ ಸ್ಥಳೀಯರಿಗೆ ಪಾಸ್ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಗಳ ಬದಿಯಲ್ಲಿರುವ ಶಾಲೆಗಳ ಮುಂಭಾಗ ವಾಹನಗಳ ವೇಗ ತಗ್ಗಿಸಲು ರಸ್ತೆ ಡುಬ್ಬ ನಿರ್ಮಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿ ಪ್ರಗತಿ ಪರಿಶೀಲಿಸಿದ ವೇಳೆ ಅಧಿಕಾರಿಗಳು ಮಾಹಿತಿ ನೀಡಿ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಅಳವಡಿಕೆ ಕಾಮಗಾರಿ ಗುಂಡ್ಲುಪೇಟೆ ತಾಲೂಕಿನಲ್ಲಿ ಪೂರ್ಣಗೊಂಡಿದೆ. ಚಾಮರಾಜನಗರ ತಾಲೂಕಿನಲ್ಲಿ ಒಂದು ವಾರದೊಳಗೆ ಪೂರ್ಣಗೊಳಿಸಲಾಗುವುದು ಹಾಗೂ ಕೊಳ್ಳೇಗಾಲ ಮತ್ತು ಹನೂರು ತಾಲೂಕುಗಳಲ್ಲಿ ಮುಂದಿನ 15 ದಿನದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.

ಬಳಿಕ ಸಂಸದ ಸುನೀಲ್ ಬೋಸ್ ಮಾತನಾಡಿ, ಹನೂರು ಭಾಗದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಅಗತ್ಯವಿರುವ ಗ್ರಾಮಗಳಿಗೆ ಟ್ಯಾಂಕರ್‍ಗಳಲ್ಲಿ ನೀರು ಸರಬರಾಜು ಮಾಡಬೇಕು. ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು. ಗಾಳಿಪುರದಲ್ಲಿ ಕುಡಿಯುವ ನೀರಿಗಾಗಿ 12 ವರ್ಷಗಳ ಹಿಂದೆ ವಾಟರ್‍ಟ್ಯಾಂಕ್ ಕಟ್ಟಿ ಹಾಗೆಯೇ ಬಿಡಲಾಗಿದ್ದು, ಇದರ ಬಳಕೆಯಾಗಿಲ್ಲ. ಇದರಿಂದ ಜನರ ತೆರಿಗೆ ಹಣ ಪೋಲಾಗಿದೆ. ಕುಡಿಯುವ ನೀರು ಸರಬರಾಜು ವಿಚಾರದಲ್ಲಿ ಅಧಿಕಾರಿಗಳು ಯಾವುದೇ ಸಬೂಬು ಹೇಳುವಂತಿಲ್ಲ. ಜನರಿಗೆ ಆದ್ಯತೆ ಮೇರೆಗೆ ಕುಡಿಯುವ ನೀರು ಒದಗಿಸುವಂತೆ ತಿಳಿಸಿದರು.

ಜಿಲ್ಲೆಯ ಕಾಡಂಚಿನ ಪುದೂರು, ಪಾಲಾರ್ ಹಾಗೂ ಆಲಂಬಾಡಿ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜನರು ಮನೆ ಕಟ್ಟಿಕೊಳ್ಳಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ ಹಕ್ಕುಪತ್ರ ನೀಡಿದ್ದರೂ ಮನೆ ಕಟ್ಟುವ ಕಾಮಗಾರಿಗೆ ಬೇಕಾಗಿರುವ ಸಾಮಗ್ರಿಗಳನ್ನು ಅರಣ್ಯದೊಳಗೆ ತರಲು ಅರಣ್ಯಾಧಿಕಾರಿಗಳು ಅಡ್ಡಿಪಡಿಸುತ್ತಿರುವ ಬಗ್ಗೆ ದೂರುಗಳನ್ನು ಗಮನಿಸಲಾಗಿದೆ. ತಾವು ಭೇಟಿ ನೀಡಿದ ವೇಳೆಯು ಜನರು ಈ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ. ಮನೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ಬಡವರು ಸೂರು ಕಟ್ಟಿಕೊಳ್ಳಲು ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ, ಗಣಿ ಇಲಾಖೆ, ಬಿಎಸ್.ಎನ್.ಎಲ್ ಸೇರಿದಂತೆ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

ಸಭೆಯಲ್ಲಿ ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share this Article
Leave a comment